ವಿಪತ್ತು ನಿರ್ವಹಣಾ ಅಣಕು ಪ್ರದರ್ಶನಕ್ಕೆ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ
ಬೆಂಗಳೂರು : ಅನಿಲ ಸೋರಿಕೆಯಾದಾಗ ಯಾವ ರೀತಿ ಮುಂಜಾಗ್ರತಾ ಕ್ರಮ ವಹಿಸಬೇಕು ಹಾಗೂ ಪರಿಸ್ಥಿತಿಯನ್ನು ನಿಬಾಯಿಸಬೇಕು ಎಂಬುದರ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಅಣಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು ಆಯಾ ಇಲಾಖೆಗೆ ವಹಿಸಿರುವ ಜವಬ್ದಾರಿಯನ್ನು ನಿರ್ವಹಿಸಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್.ಜಿ ರವರು ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಅಣಕು ಪ್ರದರ್ಶನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೇಲ್ ಗ್ಯಾಸ್ ಸಂಸ್ಥೆ (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್), ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಇವರ ಸಹಯೋಗದೊಂದಿಗೆ ಡಿಸೆಂಬರ್ 27 ರಂದು ಬೆಳಿಗ್ಗೆ 11.30 ಗಂಟೆಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಹೋಬಳಿಯ, ಸರ್ಜಾಪುರ ಮುಖ ರಸ್ತೆಯಲ್ಲಿರುವ ಗೈಲ್ ಗ್ಯಾಸ್ ಲಿಮಿಟೆಡ್ ಎಂಡಿಪಿಇ ಪೈಪ್ಲೈನ್ ಇಲ್ಲಿ ಅಣಕು ಪ್ರದರ್ಶನ ನಡೆಯಲಿದೆ ಎಂದರು.
ಅಣಕು ಪ್ರದರ್ಶನ ನಡೆಯುವ ಸಂದರ್ಭದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಹಾಗೂ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಡಾ.ಜಗದೀಶ್ ಕೆ.ನಾಯಕ್, ಗೇಲ್ ಗ್ಯಾಸ್ ಸಂಸ್ಥೆಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030