ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ; 25 ಕಡೆ ಏಕಕಾಲಕ್ಕೆ ದಾಳಿ!
ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರು , ಚಿಕ್ಕಬಳ್ಳಾಪುರ , ಮಂಡ್ಯ , ಮಂಗಳೂರು, ಸೇರಿದಂತೆ ಹಲವು ಕಡೆ ಲೋಕಾಯುಕ್ತ ದಾಳಿ ನಡೆದಿದೆ.
ನಾಲ್ವರು ಅಧಿಕಾರಿಗಳಿಗೆ ಸಂಬಂಧಿಸಿದ ಒಟ್ಟು 25 ಕಡೆಗಳಲ್ಲಿ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮನೆ ಮೇಲೆ ದಾಳಿ ಮಾಡಲಾಗಿದೆ. ಅಲ್ಲದೆ ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಬೆಂಗಳೂರಿನ ಟೌನ್ ಅಂಡ್ ಪ್ಲಾನಿಂಗ್ ಡೈರಕ್ಟರ್ ತಿಪ್ಪೇಸ್ವಾಮಿ, ಬೆಂಗಳೂರಿನಲ್ಲಿ ಅಬಕಾರಿ ಇಲಾಖೆಯ ಎಸ್ಪಿ ಮಹೇಶ್ ಮನೆ ಮೇಲೆ ದಾಳಿ ಮಾಡಲಾಗಿದೆ. ಈ ನಾಲ್ವರು ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಶಾಕ್ ಕೊಟ್ಟಿದ್ದು, ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಕೃಷ್ಣವೇಣಿಗೆ ಲೋಕಾಯುಕ್ತ ಶಾಕ್
ಇನ್ನು ಚಿಕ್ಕಬಳ್ಳಾಪುರದಲ್ಲಿ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಪ್ಲಾಟ್ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಯಲಹಂಕ ಬಳಿ ಇರೋ ಪ್ಲಾಟ್ ಮೇಲೆ ದಾಳಿ ನಡೆಸಿದ್ದಾರೆ. ಕೃಷ್ಣವೇಣಿ ಅವರಿಗೆ ಸಂಬಂಧಿಸಿದಂತೆ ಮಂಗಳೂರು, ಮೈಸೂರು, ಬೆಂಗಳೂರಿನಲ್ಲಿ ಏಕಕಾಲದಲ್ಲಿ ದಾಳಿ ಮಾಡಿ ಆಸ್ತಿಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೂ ರೇಡ್ ನಡೆಸಿದ್ದಾರೆ. ಕೃಷ್ಣವೇಣಿ ಅವರು ಕಳೆದ ಎರಡು ತಿಂಗಳ ಹಿಂದಷ್ಟೆ ಮಂಗಳೂರಿಗೆ ವರ್ಗಾವಣೆಯಾಗಿದ್ದರು. ಮೂರು ವಾಹನಗಳಲ್ಲಿ ಆಗಮಿಸಿ ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಕಾವೇರಿ ನೀರಾವರಿ ನಿಗಮದ ಎಂಡಿ ಮನೆ ಮೇಲೆ ದಾಳಿ
ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ಎಂಡಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹೇಶ್ ವಿರುದ್ಧ ಹಲವು ದೂರು ಬಂದ ಹಿನ್ನೆಲೆ ಮಂಡ್ಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ 9 ಕಡೆ ಏಕ ಕಾಲದಲ್ಲಿ ದಾಳಿ ಮಾಡಲಾಗಿದೆ. ಮಂಡ್ಯದ ಕೆಆರ್ಎಸ್ ರಸ್ತೆಯಲ್ಲಿರು ಪೆಟ್ರೋಲ್ ಬಂಕ್, ಮಳವಳ್ಳಿಯ ದಳವಾಯಿ ಕೋಡಿಹಳ್ಳಿ ನಿವಾಸದಲ್ಲೂ ತಲಾಷ್ ಆರಂಭಿಸಿದ್ದಾರೆ. ಮಂಡ್ಯ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ಮಾಡಿದ್ದು, ಬೆಳಗ್ಗಿನಿಂದ ಕಡತಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇತ್ತ ಬೆಂಗಳೂರು ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕ ತಿಪ್ಪೇಸ್ವಾಮಿ ಮನೆಯಲ್ಲೂ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಬೆಂಗಳೂರಿನ ಗಿರಿನಗರದ 4ನೇ ಫೇಸ್ ವಿಶ್ವೇಶ್ವರಯ್ಯ ರಸ್ತೆ ಬಳಿ ಇರುವ ಬಂಗಲೆ ಮೇಲೆ ಎಸ್ಪಿ ಶ್ರೀನಾಥ್ ಜೋಷಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಬಂಗಲೆಯಲ್ಲಿ ಪರಿಶೀಲನೆ ನಡೆಸುತ್ತಿದ್ದು, ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ತಿಪ್ಪೇಸ್ವಾಮಿ ಅವರಿಗೆ ಸಂಬಂಧಿಸಿದಂತೆ ದಾವಣಗೆರೆಯಲ್ಲೂ ದಾಳಿ ನಡೆದಿದೆ. ಚನ್ನಗಿರಿ ತಾಲೂಕಿನ ನಲ್ಕುದುರೆ ಗ್ರಾಮದಲ್ಲಿರುವ ತಿಪ್ಪೇಸ್ವಾಮಿ ಅವರ ಪತ್ನಿ ಮನೆ ಮೇಲೆ ಲೊಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ…
ವರದಿ. ಮಹಾಲಿಂಗ ಗಗ್ಗರಿ, ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030