ಜಿಲ್ಲೆಯ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ-ಸುರಕ್ಷಾ ಪರಿಕರ ಒದಗಿಸುವಂತೆ
-ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
ವಿಜಯಪುರ, : ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಆರೋಗ್ಯ ಕುರಿತು ತೀವ್ರ ಕಾಳಜಿ ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಬೇಕು. ನಿಗದಿತ ಕನಿಷ್ಠ ವೇತನ ಪಾವತಿ, ಜೀವ ವಿಮೆ ಸೌಲಭ್ಯ, ಉಪಹಾರ, ಸುರಕ್ಷತಾ ಪರಿಕರಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಮ್ಯಾನ್ಯುವೆಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013ರ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪೌರಕಾರ್ಮಿಕರು, ಸ್ವಚ್ಛತಾ ಕೆಲಸಗಾರರಿಗೆ ಅತ್ಯುತ್ತಮ ಗುಣಮಟ್ಟದ ಪರಿಕರ ಹಾಗೂ ಸಮವಸ್ತ್ರ ಒದಗಿಸಬೇಕು. ಪೌರಕಾರ್ಮಿಕರಿಗೆ ಸುರಕ್ಷತೆ ಬಗ್ಗೆ ಎಚ್ಚರಿಕೆ ವಹಿಸುವಂತೆ ಸುರಕ್ಷಾ ಕಿಟ್-ಪರಿಕರ ಬಗ್ಗೆ ತರಬೇತಿ ಹಮ್ಮಿಕೊಳ್ಳಬೇಕು. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಖಾಯಂ ನೇರಪಾವತಿ-ಗುತ್ತಿಗೆ ಆಧಾರದ ಇರುವವರಿಗೆ ಕಡ್ಡಾಯವಾಗಿ ಇಎಸ್‍ಐ, ಪಿಎಫ್ ವಿಮೆ ಸೌಲಭ್ಯ ದೊರಕಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ನಗರ ಸ್ವಚ್ಛತೆ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಪ್ರಥಮಾದ್ಯತೆಯ ಮೇಲೆ ಮೂಲಸೌಲಭ್ಯ ಒದಗಿಸುವಂತೆ ತಿಳಿಸಿದ ಅವರು, ನವೆಂಬರ್ 1 ರೊಳಗೆ ಗೃಹಭಾಗ್ಯ ಯೋಜನೆಯ ಮನೆಗಳನ್ನು ಪೌರಕಾರ್ಮಿಕರಿಗೆ ಹಸ್ತಾಂತರ ಮಾಡುವಂತೆ ಮಹಾನಗರ ಪಾಲಿಕೆಗೆ ಅವರು ಸೂಚನೆ ನೀಡಿದರು.
ಹೊಸದಾಗಿ ಪೌರಕಾರ್ಮಿಕರಿಗಾಗಿ ನಿರ್ಮಿಸಿದ ವಸತಿ ಸಮುಚ್ಛಗಳಿಗೆ ಸೂಕ್ತ ಬಸ್ ಸೌಲಭ್ಯ ಕಲ್ಪಿಸಬೇಕು. ಪೌರಕಾರ್ಮಿಕರ ಮಕ್ಕಳಿಗೆ ಜಿಲ್ಲೆಯಲ್ಲಿರುವ ವಸತಿ ಶಾಲೆಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲು ಕ್ರಮ ವಹಿಸಬೇಕು. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಯಂ ಆಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರ ಕುರಿತು ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯ ಮಹಾನಗರ ಪಾಲಿಕೆ ಸೇರಿದಂತೆ 15 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಯಾವುದೇ ಮ್ಯಾನುವೆಲ್ ಸ್ಕ್ಯಾವೆಂಜರ್‍ಗಳು ಇರುವುದಿಲ್ಲ. ಜಿಲ್ಲೆಯಲ್ಲಿ ಒಟ್ಟು 588 ಖಾಯಂ ಪೌರಕಾರ್ಮಿಕರರಿದ್ದು, ಈ ಪೈಕಿ 240 ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಬಿಎಲ್‍ಸಿ-124, ಎಎಚ್‍ಪಿ-116 ಸೇರಿದಂತೆ ಒಟ್ಟು 240 ಮನೆಗಳು ಅನುಮೋದನೆಗೊಂಡು 131 ಮನೆಗಳು ಮುಕ್ತಾಯಗೊಂಡಿವೆ. ಬಾಕಿ ಉಳಿದ ಮನೆಗಳ ಕಾಮಗಾರಿ ಪ್ರಗತಿಯಲ್ಲಿವೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 56 ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರ ನೀಡಲಾಗಿದೆ. ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ನಿಯಮಿತವಾಗಿ ವೇತನ ಹಾಗೂ ಇಎಸ್‍ಐ ಮತ್ತು ಇಪಿಎಫ್‍ಗಳನ್ನು ಪಾವತಿಸಲಾಗಿದೆ ಎಂದು ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೌದಾಗರ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಇಂಡಿ ಉಪವಿಭಾಗಾಧಿಕಾರಿ ಅಬೀದ ಗದ್ಯಾಳ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರಾಠೋಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲಿಕ ಮಾನವರ, ಮಹಾನಗರ ಪಾಲಿಕೆ ಪರಿಸರ ಅಭಿಯಂತರ ಸಜ್ಜನ, ಪುರಸಭೆ ಮತ್ತು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030