ಸೆ.5 ರಂದು ಶಿಕ್ಷಕರ ದಿನಾಚರಣೆ: ಅಗತ್ಯ ಸಿದ್ಧತೆಗೆ ಸೂಚನೆ
ಹಾಸನ : ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಅಂಗವಾಗಿ ಸೆ.5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿoದು ಶಿಕ್ಷಕರ ದಿನಾಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ನಗರದ ಹಾಸನಾಂಬ ಕಲಾ ಭವನದಲ್ಲಿ ಸೆ.5 ರಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಸಲು ಕ್ರಮವಹಿಸುವಂತೆ ತಿಳಿಸಿದರು.
ಕಾರ್ಯಕ್ರಮಕ್ಕೆ ಆಹ್ವಾನ ಪತ್ರಿಕೆಯನ್ನು ಶಿಷ್ಟಾಚಾರದಂತೆ ಮುದ್ರಿಸಿ ಜನಪ್ರತಿನಿಧಿಗಳನ್ನು ಆಹ್ವಾನಿಸಲು ಸೂಚಿಸಿದರಲ್ಲದೆ, ಕಾರ್ಯಕ್ರಮಕ್ಕೆ ಉತ್ತಮ ಭಾಷಣಕಾರರನ್ನು ಆಹ್ವಾನಿಸುವಂತೆ ತಿಳಿಸಿದರು.
ಜಿಲ್ಲಾ ಅತ್ಯುತ್ತಮ ಶಿಕ್ಷಕರು ಮತ್ತು ನಿವೃತ್ತ ಶಿಕ್ಷಕರು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದಿರುವ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ತಲಾ ಮೂರು ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪಾಂಡು ಸಭೆಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಡಯಟ್ ಪ್ರಾಂಶುಪಾಲರಾದ ರಂಗಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಹಾಲಿಂಗಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಣ್ಣೇಗೌಡ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು…
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030