ಕೊಪ್ಪಳ ಜಿಲ್ಲೆಯಲ್ಲಿ ಹೊಸದಾಗಿ ವಿಶ್ವ ವಿದ್ಯಾನಿಲಯ ಸ್ಥಾಪನೆ ಕುರಿತು ತಜ್ಞರ ಸಮಿತಿ ಭೇಟಿ…!!!

Listen to this article

ಕೊಪ್ಪಳ ಜಿಲ್ಲೆಯಲ್ಲಿ ಹೊಸದಾಗಿ ವಿಶ್ವ ವಿದ್ಯಾನಿಲಯ ಸ್ಥಾಪನೆ ಕುರಿತು ತಜ್ಞರ ಸಮಿತಿ ಭೇಟಿ

ವಿಶ್ವವಿದ್ಯಾನಿಲಯ ಸ್ಥಾಪನೆ ಕುರಿತು ಸಾಧಕ ಬಾಧಕಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು: ಪ್ರೊ. ಸಿದ್ದು ಅಲಗೂರ

ಕೊಪ್ಪಳ, ಜು.23  ರಾಜ್ಯ ಸರ್ಕಾರ ಕೊಪ್ಪಳ ಜಿಲ್ಲೆಯಲ್ಲಿ ಹೊಸದಾಗಿ ವಿಶ್ವವಿದ್ಯಾನಿಲಯ ಸ್ಥಾಪಿಸಲು ಉದ್ದೇಶಿಸಿದ್ದು, ಜಿಲ್ಲೆಯಲ್ಲಿ ವಿವಿ ಸ್ಥಾಪನೆ ಕುರಿತು ಸಾಧಕ-ಬಾಧಕಗಳನ್ನು ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಬಳ್ಳಾರಿಯ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾನಿಲಯದ ಕುಲಪತಿಗಳು ಹಾಗೂ ತಜ್ಞರ ಸಮಿತಿಯ ಅಧ್ಯಕ್ಷರಾದ ಪ್ರೊ. ಸಿದ್ದು ಪಿ. ಅಲಗೂರ ಅವರು ಹೇಳಿದರು.
ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೊಪ್ಪಳ ವಿಶ್ವವಿದ್ಯಾನಿಲಯ ಸ್ಥಾಪನೆ ಕುರಿತ ಅಧ್ಯಯನಕ್ಕಾಗಿ ರಚಿಸಿದ ತಜ್ಞರ ಸಮಿತಿ, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯು ಕಲ್ಯಾಣ ಕರ್ನಾಟಕ ವ್ಯಾಪ್ತಿಗೊಳಪಟ್ಟಿದ್ದು, ಇಲ್ಲಿನ ವಿದ್ಯಾರ್ಥಿಗಳಿಗೆ ಹಾಗೂ ಈ ಭಾಗದ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಹೊಸ ವಿಶ್ವ ವಿದ್ಯಾನಿಲಯವನ್ನು ಸ್ಥಾಪಿಸಲು ಉದ್ದೇಶಿಸಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಮಹತ್ವವನ್ನು ನೀಡುವ ಸದುದ್ದೇಶದಿಂದ ವಿಶ್ವವಿದ್ಯಾನಿಲಯ ಸ್ಥಾಪನೆ ಕುರಿತ ಸಾಧಕ-ಬಾಧಕಗಳನ್ನು ಪರಿಶೀಲಿಸಿ ವರದಿ ಸಲ್ಲಿಸಲು ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದೆ. ಸಮಿತಿಯು ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಚಾರ್ಯರು, ಶಿಕ್ಷಣ ತಜ್ಞರು, ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಜಿಲ್ಲೆಯಲ್ಲಿ ವಿವಿ ಸ್ಥಾಪನೆಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು, ಕಟ್ಟಡ ಮತ್ತು ಸ್ಥಳವಕಾಶದ ಲಭ್ಯತೆ, ವಿದ್ಯಾರ್ಥಿಗಳ ಬೇಡಿಕೆ, ಹೆಚ್ಚಿನ ಬೇಡಿಕೆ ಇರುವ ಶೈಕ್ಷಣಿಕ ವಿಷಯಗಳು, ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗುವ ಅಂಶಗಳು, ಮಾನವ ಸಂಪನ್ಮೂಲದ ಪೂರೈಕೆ, ಮುಂತಾದವುಗಳನ್ನು ಪರಿಶೀಲಿಸಿ, ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಅವರು ಸಮಿತಿಯ ಕಾರ್ಯಗಳ ಬಗ್ಗೆ ತಿಳಿಸಿದರು.
ಕೇಂದ್ರ ಸರ್ಕಾರ ಜಾರಿ ಮಾಡಿರುವ ರಾಷ್ಟಿçÃಯ ಶಿಕ್ಷಣ ನೀತಿ-2020 ನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಮಹತ್ವದ ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರನ್ವಯ ಜಿಲ್ಲೆಯಲ್ಲಿ ಹೊಸ ವಿಶ್ವವಿದ್ಯಾನಿಲಯ ಸ್ಥಾಪನೆಗೆ ನಿಗದಿತ ಅಂಶಗಳನ್ನು ಅಧ್ಯಯನ ಮಾಡಬೇಕಾಗಿದ್ದು, ಸ್ಥಳೀಯ ಅಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಣ ತಜ್ಞರು ಜಿಲ್ಲೆಯ ವಾಸ್ತವಾಂಶಗಳ ಕುರಿತು ಮಾಹಿತಿಯನ್ನು ನೀಡಿದಲ್ಲಿ ಅವುಗಳನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.
ಯಲಬುರ್ಗಾ ಶಾಸಕರಾದ ಹಾಲಪ್ಪ ಆಚಾರ್ ಮಾತನಾಡಿ, ಜಿಲ್ಲೆಯಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಬೇಕು ಎಂಬುದು ಜಿಲ್ಲೆಯ ಜನರ, ವಿದ್ಯಾರ್ಥಿಗಳ ಆಸೆಯೂ ಹೌದು, ಅಗತ್ಯವೂ ಹೌದು. ಪ್ರಸ್ತುತ ನಮ್ಮ ಜಿಲ್ಲೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಧಾರವಾಡ, ಬಳ್ಳಾರಿ, ಕಲಬುರಗಿ ಸೇರಿದಂತೆ ಇತರೆ ಜಿಲ್ಲೆಗಳ ವಿಶ್ವ ವಿದ್ಯಾಲಯಗಳಿಗೆ ವಲಸೆ ಹೋಗುತ್ತಾರೆ. 2016 ರಲ್ಲಿ ಜಿಲ್ಲೆಯಲ್ಲಿ ಬಳ್ಳಾರಿಯ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾನಿಲಯದಿಂದ ಸ್ನಾತಕೋತ್ತರ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಕೊಪ್ಪಳ, ಗಂಗಾವತಿ, ಯಲಬುರ್ಗಾ ತಾಲ್ಲೂಕುಗಳಲ್ಲಿರುವ ಈ ಕೇಂದ್ರಗಳಲ್ಲಿ ಸುಮಾರು 1300 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಇದು ನಮ್ಮ ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಮಾಡಲು ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಆಸಕ್ತಿಯನ್ನು ತಿಳಿಸುತ್ತದೆ ಎಂದರು.
ಸದ್ಯ ಜಿಲ್ಲೆಯಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಅಗತ್ಯವಾದ ಕಟ್ಟಡ ಲಭ್ಯವಿದ್ದು, ವಿಶ್ವವಿದ್ಯಾನಿಲಯ ಸ್ಥಾಪನೆಗೆ ಹೆಚ್ಚಿನ ಆರ್ಥಿಕ ಹೊರೆಯಾಗುವುದಿಲ್ಲ. ಈ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಅಗತ್ಯವನ್ನು ಪೂರೈಸಲು ಜಿಲ್ಲೆಯಲ್ಲಿ ಹೊಸ ವಿಶ್ವವಿದ್ಯಾನಿಲಯ ಸ್ಥಾಪಿಸುವ ಅಗತ್ಯವಿದೆ. ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಮಟ್ಟವನ್ನು ಉತ್ತಮಗೊಳಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶ್ವವಿದ್ಯಾನಿಲಯ ಪೂರಕವಾಗಿರಲಿದೆ. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರಿಂದ ವಿವಿ ಸ್ಥಾಪನೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸಾಮರ್ಥ್ಯವಿರುವ ಮಾನವ ಸಂಪನ್ಮೂಲ, ಅಭಿವೃದ್ಧಿಗೆ ಪೂರಕವಾಗಿರುವ ಭೌಗೋಳಿಕ, ಸಾಮಾಜಿಕ ಅಂಶಗಳು ಹೆಚ್ಚಾಗಿದ್ದು, ಅದನ್ನು ಸೂಕ್ತ ಮಾರ್ಗದಲ್ಲಿ ಬಳಸಿಕೊಳ್ಳುವುದು ಮುಖ್ಯ. ಜಿಲ್ಲೆಯ ಮುಂದಿನ ಪೀಳಿಗೆಯ ವಿದ್ಯಾರ್ಥಿಗಳ ಅನುಕೂಲಕ್ಕೆ ಜಿಲ್ಲೆಯಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆಯ ಅವಶ್ಯಕತೆಯಿದೆ. ಅದರಂತೆಯೇ ವಿಶ್ವವಿದ್ಯಾನಿಲಯಗಳು ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಮೂಲಕ ಭವಿಷ್ಯತ್ತಿನ ಔದ್ಯೋಗಿಕ ಅವಕಾಶಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವ ಕಾರ್ಯವನ್ನು ಮಾಡುವುದು ಸಹ ಅಗತ್ಯವಾಗಿದೆ. ಜಿಲ್ಲೆಯಲ್ಲಿ ಕೈಗಾರಿಕೆಗಳು ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ಕೈಗಾರಿಕಾ ಕ್ಷೇತ್ರ ಇನ್ನಷ್ಟು ವಿಸ್ತರಿಸಬಹುದು. ಆದ್ದರಿಂದ ಜಿಲ್ಲೆಯಲ್ಲಿ ವಿದ್ಯಾರ್ಥಿಗಳನ್ನು ತಾಂತ್ರಿಕ ವಿಷಯಗಳಲ್ಲಿ ಪರಿಣಿತರನ್ನಾಗಿಸುವ ಅಗತ್ಯವಿದೆ. ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ವಿವಿ ಯಲ್ಲಿ ಶೈಕ್ಷಣಿಕ ವಿಷಯಗಳೊಂದಿಗೆ ತಾಂತ್ರಿಕ ವಿಷಯಗಳಲ್ಲಿ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ತರಬೇತಿಯನ್ನು ನೀಡಬಹುದು. ಇದರಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಉನ್ನತ ತಾಂತ್ರಿಕ ಹುದ್ದೆಗಳಿಗೆ ಸ್ಥಳೀಯ ವಿದ್ಯಾರ್ಥಿಗಳೇ ಆಯ್ಕೆಯಾಗಬಹುದು. ಆದ್ದರಿಂದ ಎಲ್ಲ ರೀತಿಯ ಅಭಿವೃದ್ಧಿಗೆ ಪೂರಕವಾದ ವಿಷಯಗಳನ್ನು ಹೊಂದಿರುವ ವಿಶ್ವವಿದ್ಯಾನಿಲಯ ಜಿಲ್ಲೆಯಲ್ಲಿ ಸ್ಥಾಪನೆಯಾಗಬೇಕು ಎಂದು ಹೇಳಿದರು.
ಸಮಿತಿ ಸದಸ್ಯರಾದ ವಿಜಯಪುರದ ಅಕ್ಕಮಹಾದೇವಿ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಡಾ. ಮೀನಾ ಚಂದಾವರ್‌ಕರ್, ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಕೆ.ಬಿ.ಗುಡಸಿ, ಸಮಿತಿಯ ಸಂಚಾಲಕರಾದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಕಾರ್ಯನಿರ್ವಾಹಕ ನಿರ್ದೇಶಕರು ಸಮಿತಿಯ ಉದ್ದೇಶ ಹಾಗೂ ವಿವಿ ಸ್ಥಾಪನೆಯ ಮಹತ್ವದ ಕುರಿತು ಚರ್ಚಿಸಿದರು.
ಡಿಡಿಪಿಯು ದೇವೇಂದ್ರಪ್ಪ ಗಡೇದ, ಜಂಟಿ ಕೈಗಾರಿಕಾ ನಿರ್ದೇಶಕ ಪ್ರಶಾಂತ ಬಾರಿಗಿಡದ, ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾನಿಲಯದ ಕೊಪ್ಪಳದ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ.ಬಸವರಾಜ ಬೆಣ್ಣಿ, ಅಭಯ್ ಸಾಲ್ವೆಂಟ್ ಪ್ರೆöÊ.ಲಿ. ನ ನಿರ್ದೇಶಕರಾದ ಮಹಾವೀರ್ ಮೆಹ್ತಾ ವಿವಿ ಸ್ಥಾಪನೆ ಕುರಿತು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ತಳಕಲ್ ಇಂಜಿನಿಯರಿAಗ್ ಕಾಲೇಜಿನ ಬಸವರಾಜ ಡಂಬಳ, ಪೂಜಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ ದೊಡ್ಡಮನಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ತಿರುಮಲರಾವ ಕುಲಕರ್ಣಿ, ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಾಣೇಶ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವರದಿ. ದಾವಲ್ ಮಲ್ಲಿಕ್

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend