ಕ್ರಿಯಾಯೋಜನೆ ತಯಾರಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು…!!!

Listen to this article

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ
ಕೋವಿಡ್-19 ಸಂಭಾವ್ಯ ಮೂರನೇ ಅಲೆಗೆ ಸಕಲ ಸಿದ್ಧತೆಕೈಗೊಳ್ಳಿ: ಅಗತ್ಯವಿರುವ ಸೌಲಭ್ಯಗಳಿಗಾಗಿ ಕ್ರಿಯಾಯೋಜನೆ ತಯಾರಿಸಿ
ಚಿತ್ರದುರ್ಗ,ಜೂನ್25:
ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ಮೂರನೇ ಅಲೆಗೆ ಸಕಲ ಸಿದ್ಧತೆಕೈಗೊಳ್ಳಬೇಕು. ಕೋವಿಡ್-19 ಚಿಕಿತ್ಸೆಗೆ ಅಗತ್ಯವಿರುವ ಸೌಲಭ್ಯಗಳ ಕುರಿತು ಶೀಘ್ರದಲ್ಲಿ ಕ್ರಿಯಾಯೋಜನೆ ತಯಾರಿಸುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ಮೂರನೇ ಅಲೆಯ ಸಿದ್ಧತೆಯ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್-19 ಸಂಭಾವ್ಯ ಮೂರನೇ ಅಲೆ ಮಕ್ಕಳಲ್ಲಿ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇದೆ.ಹಾಗಾಗಿ ಕೋವಿಡ್-19 ಚಿಕಿತ್ಸೆಗೆ ಅಗತ್ಯವಿರುವ ಸಿಬ್ಬಂದಿ, ಸೌಲಭ್ಯಗಳು, ತರಬೇತಿ ಹಾಗೂ ಕೋವಿಡ್ ಕೇರ್ ಸೆಂಟರ್‍ಗಳ ಅಗತ್ಯತೆ, ಔಷಧಿ ಸೇರಿದಂತೆ ಯಾವ ರೀತಿಯ ಸೌಲಭ್ಯಗಳಿರಬೇಕು ಎಂಬುವುದರ ಕುರಿತು ಸಂಕ್ಷಿಪ್ತವಾಗಿ ಶೀಘ್ರದಲ್ಲಿ ಕ್ರಿಯಾಯೋಜನೆ ತಯಾರಿಸಬೇಕು ಎಂದು ತಾಕೀತು ಮಾಡಿದರು.
ಕೋವಿಡ್ ಮೂರನೇ ಅಲೆ ಸೋಂಕು ನಿಯಂತ್ರಣ ಹಾಗೂ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಅಂಗವಿಕಲರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಹ ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಮಾತನಾಡಿ, ಕೋವಿಡ್-19 ಮೂರನೇ ಅಲೆಗೆ ಸಂಬಂಧಿಸಿದಂತೆ ಈಗಾಗಲೇ ಎರಡು ಪೂರ್ವಭಾವಿ ಸಭೆಗಳನ್ನು ಆಯೋಜಿಸಲಾಗಿದೆ. ಮೊದಲ ಮತ್ತು ಎರಡನೇ ಅಲೆಯಲ್ಲಿ ಸಮಸ್ಯೆಗಳನ್ನು ಎದುರಿಸಲಾಗಿದೆ. ಹಾಗಾಗಿ ಕೆಲವೊಂದು ಬದಲಾವಣೆಗಳೊಂದಿಗೆ ಮೂರನೇ ಅಲೆಯನ್ನು ಎದುರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಕೋವಿಡ್-19 ಸಂಭಾವ್ಯ ಮೂರನೇ ಅಲೆಯು ಹೆಚ್ಚಾಗಿ ಮಕ್ಕಳಲ್ಲಿ ಸೋಂಕು ಕಾಣಿಸುವ ಸಾಧ್ಯತೆ ಇರುವುದರಿಂದ ಮಕ್ಕಳಿಗಾಗಿ ಜಿಲ್ಲೆಯ ಆರು ತಾಲ್ಲೂಕುಗಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ 10 ರಿಂದ 20 ಹಾಸಿಗೆಗಳ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು.
0-6 ವರ್ಷದ ಮಕ್ಕಳಿಗೆ ತಾಲ್ಲೂಕಿಗೆ 30 ಬೆಡ್, 0-6 ಅಂಗವಿಕಲ ಮಕ್ಕಳಿಗೆ ತಾಲ್ಲೂಕಿಗೆ 10, 7 ರಿಂದ 18 ವರ್ಷದ ಮಕ್ಕಳಿಗೆ ತಾಲ್ಲೂಕುವಾರು ಬಾಲಕರಿಗೆ-25, ಬಾಲಕಿಯರಿಗೆ 25 ಪ್ರತ್ಯೇಕ ಬೆಡ್‍ಗಳು 7 ರಿಂದ 18 ವರ್ಷದ ಅಂಗವಿಕಲ ಮಕ್ಕಳಿಗೆ ತಾಲ್ಲೂಕುವಾರು ಬಾಲಕರಿಗೆ 5 ಹಾಗೂ ಬಾಲಕಿಯರಿಗೆ 5  ಬೆಡ್‍ಗಳನ್ನು ಹಂಚಿಕೆ ಮಾಡಬೇಕು ಎಂದು ತಿಳಿಸಿದರು.
ಮಕ್ಕಳಿಗೆ ಕೋವಿಡ್-19 ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸಿಬ್ಬಂದಿಯನ್ನು ಗುರುತಿಸಿ, ಅಂತಹ ಸಿಬ್ಬಂದಿಗೆ ಅಗತ್ಯವಿರುವ ತರಬೇತಿಯನ್ನು ಆನ್‍ಲೈನ್ ಮೂಲಕ ತರಬೇತಿ ನೀಡುವ ಅಗತ್ಯವಿದೆ. ಇದರಿಂದ ಚಿಕಿತ್ಸೆಯ ಸಂದರ್ಭದಲ್ಲಿ ಆಗುವ ಸಮಸ್ಯೆಯನ್ನು ತಪ್ಪಿಸಬಹುದಾಗಿದೆ ಎಂದರು.
ಆರ್‍ಸಿಹೆಚ್ ಅಧಿಕಾರಿ ಡಾ.ಕುಮಾರಸ್ವಾಮಿ ಮಾತನಾಡಿ, ಜಿಲ್ಲೆಯಾದ್ಯಂತ 155 ಲಸಿಕಾ ಕೇಂದ್ರಗಳಲ್ಲಿ ಲಸಿಕಾಕರಣ ಮಾಡಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲು ಜಿಲ್ಲೆಯಲ್ಲಿ 35 ಸಾವಿರ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರೊಂದಿಗೆ ಮಾತುಕತೆ ನಡೆಸಿ, ಆಯಾ ಕಾಲೇಜಿಗೆ ಹೋಗಿ ಲಸಿಕಾ ಶಿಬಿರಗಳನ್ನು ಏರ್ಪಡಿಸಬೇಕು. ಇದರಿಂದ ನಿಗಧಿಪಡಿಸಿ ಗುರಿಯನ್ನು ಸುಲಭವಾಗಿ ತಲುಪಬಹುದು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್, ಆರ್‍ಸಿಹೆಚ್ ಅಧಿಕಾರಿ ಡಾ.ಕುಮಾರಸ್ವಾಮಿ, ಬಸವೇಶ್ವರ ವೈದ್ಯಕೀಯ ಕಾಲೇಜಿನ ಅಧೀಕ್ಷಕ ಡಾ.ಫಾಲಾಕ್ಷಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ್ ಸೇರಿದಂತೆ ತಾಲ್ಲೂಕು ಆರೋಗ್ಯಾಧಿಕಾರಿಗಳು, ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ಮೂರನೇ ಅಲೆಯ ಸಿದ್ಧತೆಯ ಕುರಿತು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ವರದಿ. ಶಶಿಕುಮಾರ್ ಚಳ್ಳಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend